ಪ್ರತ್ಯೇಕ ಸಚಿವಾಲಯ ಸ್ಥಾಪನೆ – ಸಚಿವ ಪ್ರಿಯಾಂಕ್ ಖರ್ಗೆ.
ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ತಮ್ಮ ” ಎಕ್ಸ್ ” ಖಾತೆಯಲ್ಲಿ ಬರೆದುಕೊಂಡಿರುವ ಅವರು,
ಸಚಿವಾಲಯ ಸ್ಥಾಪನೆಯಾಗಿರುವುದರಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತಷ್ಟು ಅಭಿವೃದ್ಧಿ ಸಾಧ್ಯವಾಗಲಿದೆ.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳನ್ನು ಸಕಾಲದಲ್ಲಿ ಪೂರೈಸುವ ಸಲುವಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗೆ ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸುವ ಮೂಲಕ ಈ ಕಚೇರಿಗಳನ್ನು ಮತ್ತಷ್ಟು ಬಲಪಡಿಸಲೂ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ನಿಟ್ಟನಲ್ಲಿ ಹೊಸ ಸಚಿವಾಲಯವನ್ನು ಸೃಷ್ಟಿಸಲು ಕಾರಣರಾದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪಟದ ನನ್ನೆಲ್ಲ ಸಹೋದ್ಯೋಗಿಗಳಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.